ಸಿಬಿಐ ದಾಳಿಗೆ ಖಂಡನೆ : ಮಡಿಕೇರಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಪ್ರತಿಭಟನೆ

06/10/2020

ಮಡಿಕೇರಿ ಅ.6 : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನಡೆದ ಸಿಬಿಐ ದಾಳಿ ಹಾಗೂ ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ, ಸೇಡಿನ ರಾಜಕಾರಣದಲ್ಲಿ ತೊಡಗಿದ್ದು, ಕೋವಿಡ್ ಭ್ರಷ್ಟಾಚಾರ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವಾಗಿ ಈ ದಾಳಿಯನ್ನು ಮಾಡಿಸಿದೆ ಎಂದು ಆರೋಪಿದರು.
ಬಿಜೆಪಿ ಯ ಉಭಯ ಸರ್ಕಾರಗಳಿಗೆ ಸ್ವಂತ ಮತ್ತು ಸ್ವಾತಂತ್ರ್ಯ ಶಕ್ತಿ ಇಲ್ಲ ಎಂದು ಟೀಕಿಸಿದ ಅವರು, ಚುನಾವಣೆ ಸಂದರ್ಭದಲ್ಲಿ ದುರ್ಬಲರಾಗಿದ್ದಾರೆ ಎಂದು ಮನವರಿಕೆಯಾಗಿ ಐಟಿ, ಇಡಿ, ಸಿಬಿಐ ಗಳನ್ನು ಬಳಸಿಕೊಂಡು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಮಾತನಾಡಿ, ಸಂತ್ರಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್‍ನ ರಾಷ್ಟ್ರೀಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯವೆಂದರು.
ಬಿಜೆಪಿಯ ದುರಾಡಳಿತದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಭಾಷಾ, ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಗಿಲ್ಬರ್ಟ್ ಲೋಬೋ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಕಾರ್ಯದರ್ಶಿ ಕೆ.ಎಂ.ಸೈಯ್ಯದ್ ಭಾವ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಎನ್‍ಎಸ್‍ಯುಐ ಉಪಾಧ್ಯಕ್ಷ ಮುನೀರ್ ಮಚಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪಾರ್ವತಿ ಫ್ಯಾನ್ಸಿ, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಮುಖರಾದ ಹಂಸ ಕೊಟ್ಟಮುಡಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.