ಮಡಿಕೇರಿ ನಗರದ ರಸ್ತೆಗಳ ಅಭಿವೃದ್ಧಿ : ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ

06/10/2020

ಮಡಿಕೇರಿ ಅ.6 : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರು ಮಂಗಳವಾರ ಚಾಲನೆ ನೀಡಿದರು.
62.5 ಲಕ್ಷ ರೂ.ಗಳ ಕಾಮಗಾರಿಗಳಿಗೆ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಅವರು ಪೂಜೆ ನೆರವೇರಿಸಿ ಸ್ವತಃ ಜೆಸಿಬಿ ಯಂತ್ರ ಚಾಲನೆ ಮಾಡುವ ಮೂಲಕ ಕಾಮಾಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಎಸ್‍ಎಫ್‍ಸಿ ವಿಶೇಷ ಅನುದಾನದಲ್ಲಿ ಮಡಿಕೇರಿ ನಗರಸಭೆಗೆ 4 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಪೈಕಿ ಮಡಿಕೇರಿ ನಗರಸಭಾ ವ್ಯಾಪ್ತಿಯ ಕನ್ನಿಕಾ ಬಡಾವಣೆ ಒಳ ಭಾಗದಲ್ಲಿ 15 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿ, ಅಂದಾಜು 20 ಲಕ್ಷ ರೂ. ವೆಚ್ಚದಲ್ಲಿ ಮಡಿಕೇರಿ ನಗರಸಭಾ ವ್ಯಾಪ್ತಿಯ ಟಿ.ಜಾನ್ ಬಡಾವಣೆ ಒಳಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಅಂದಾಜು 27.5 ಲಕ್ಷ ರೂ. ವೆಚ್ಚದಲ್ಲಿ ಮಾರುಕಟ್ಟೆ ಸುತ್ತಲು ಇಂಟರ್ ಲಾಕಿಂಗ್ ಅಳವಡಿಸುವ ಕಾಮಗಾರಿಗಳಿಗೆ ಶಾಸಕರಾದ ಎಂ.ಪಿ ಅಪ್ಪಚ್ಚು ರಂಜನ್ ಅವರು ಚಾಲನೆ ನೀಡಿದರು.
ಇದರೊಂದಿಗೆ ಬಾಕಿ ಇರುವ 3.37 ಕೋಟಿ ರೂ ಮೊತ್ತದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮಡಿಕೇರಿ ನಗರಸಭೆ ಪೌರಾಯುಕ್ತರಾದ ರಾಮ್‍ದಾಸ್ ಅವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಪ್ರಮುಖರಾದ ಪಿ.ಡಿ ಪೊನ್ನಪ್ಪ, ರಮೇಶ್, ಪ್ರಕಾಶ್ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಅರುಣ್ ಕುಮಾರ್, ಮನು ಮಂಜುನಾಥ್, ಪ್ರೇಮಾ ರಾಘವಯ್ಯ ಮತ್ತಿತರರು ಹಾಜರಿದ್ದರು.