ಅ.13 ಮತ್ತು 14 ರಂದು ಪಿ.ಜಿ ಸಿಇಟಿ ಮತ್ತು ಡಿ.ಸಿಇಟಿ ಪರೀಕ್ಷೆ

09/10/2020

ಮಡಿಕೇರಿ ಅ. 9 : ಅಕ್ಟೋಬರ್ 13 ಮತ್ತು 14 ರಂದು ನಡೆಯಲಿರುವ ಪಿ.ಜಿ ಸಿ.ಇ.ಟಿ ಮತ್ತು ಡಿ.ಸಿ.ಇ.ಟಿ ಪರೀಕ್ಷೆಯನ್ನು ಸರ್ಕಾರದ ನಿಯಮಾವಳಿಯಂತೆ ನಡೆಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಕ್ತ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪಿಜಿ ಸಿ.ಇ.ಟಿ ಮತ್ತು ಡಿ.ಸಿ.ಇ.ಟಿ ಪರೀಕ್ಷೆಗಳನ್ನು ಸಹ ಅಚ್ಚುಕಟ್ಟಾಗಿ ನಡೆಸಬೇಕು. ಹಿಂದಿನ ಸಿ.ಇ.ಟಿ ಪರೀಕ್ಷೆಗಳಲ್ಲಿ ಅನುಸರಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಪರೀಕ್ಷೆ ನಡೆಸುವಂತೆ ಡಾ.ಸ್ನೇಹ ಅವರು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಕ್ಟೋಬರ್, 13 ರಂದು 100 ವಿದ್ಯಾರ್ಥಿಗಳು ಮತ್ತು 14 ರಂದು 300 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಜೊತೆಗೆ ಕೋವಿಡ್-19 ಸೋಂಕಿತ ವಿದ್ಯಾರ್ಥಿಗಳು ಇದ್ದಲ್ಲಿ, ಅಂತಹ ವಿದ್ಯಾರ್ಥಿಗಳು ಮೊದಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಮಾಹಿತಿ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷಾ ಕೇಂದ್ರಗಳನ್ನು ಸೂಕ್ತ ರೀತಿಯಲ್ಲಿ ಸ್ಯಾನಿಟೈಸ್ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು ಎಂದು ಅವರು ಸೂಚನೆ ನೀಡಿದರು.
ಡಿವೈಎಸ್‍ಪಿ. ದಿನೇಶ್ ಕುಮಾರ್, ಮಡಿಕೇರಿ ತಹಶೀಲ್ದಾರ್ ಮಹೇಶ್, ಜಿಲ್ಲಾ ಖಜಾನಾಧಿಕಾರಿ, ಪರೀಕ್ಷಾ ಮುಖ್ಯ ಅಧೀಕ್ಷಕರಾದ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಇತರರು ಇದ್ದರು.