ಅತ್ಯಾಚಾರ ಪ್ರಕರಣ : ದಲಿತ ಸಂಘರ್ಷ ಸಮಿತಿ ಪ್ರತಿಭಟನೆ : ಯುಪಿ ಸರ್ಕಾರ ವಜಾಕ್ಕೆ ಆಗ್ರಹ

09/10/2020

ಮಡಿಕೇರಿ ಅ.9 : ಉತ್ತರ ಪ್ರದೇಶದ ಹಥಾರಸ್ ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸುವ ಕ್ರಮಗಳನ್ನು ಕೈಗೊಳ್ಳಬೇಕು, ಮತ್ತು ಹತ್ಯೆ ಪ್ರಕರಣ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ತಕ್ಷಣ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು, ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಯುವತಿಯ ಕುಟುಂಬದವರಿಗೆ ಒಂದು ಕೋಟಿ ರೂಪಾಯಿ ಪರಿಹಾರ ಧನ ನೀಡಬೇಕು ಮತ್ತು ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಪುನರಾವರ್ತನೆಗೊಳ್ಳದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು, ಪೋಷಕರಿಗೆ ಯುವತಿಯ ಮೃತದೇಹವನ್ನು ನೀಡದೆ ಶವಸಂಸ್ಕಾರ ಮಾಡಿರುವುದು ಅಮಾನವೀಯ ಕೃತ್ಯವಾಗಿದ್ದು, ತಪ್ಪಿತಸ್ತ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಪ್ರಕರಣದ ವಿರುದ್ಧ ಪ್ರತಿಭಟನೆಗಳು ನಡೆದಾಗ ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ದೇಶದಲ್ಲಿ ದಬ್ಬಾಳಿಕೆ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ದುಷ್ಕøತ್ಯ ನಡೆಸುವವರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಅಪರಾಧವನ್ನು ನಿಯಂತ್ರಿಸಬೇಕೆಂದು ಆಗ್ರಹಿಸಿದರು.
ನೊಂದಿರುವ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಕಾರ್ಯವನ್ನು ಜನಪ್ರತಿನಿಧಿಗಳು ಮಾಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್, ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎಲ್.ಕುಮಾರ್, ಈರಪ್ಪ, ಶನಿವಾರಸಂತೆ ಹೋಬಳಿ ಸಂಚಾಲಕ ಲೋಕೇಶ್, ಮೂರ್ನಾಡು ಹೋಬಳಿ ಸಂಚಾಲಕ ರಘು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.