ಅತ್ಯಾಚಾರಕ್ಕೆ ಖಂಡನೆ : ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ

ಮಡಿಕೇರಿ ಅ.9 : ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾಕ್ರ್ಸ್‍ವಾದಿ) ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪಕ್ಷ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾರ್ಯದರ್ಶಿ ಡಾ.ಈ.ರಾ. ದುರ್ಗಾಪ್ರಸಾದ್, ಇತ್ತೀಚಿನ ದಿನಗಳಲ್ಲಿ ಯುವತಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಶೋಷಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಒಬ್ಬ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆದರೆ ಕನಿಷ್ಟ ಸಾಂತ್ವನ ಹೇಳುವಷ್ಟು ಸೌಜನ್ಯ ಯುಪಿ ಸರಕಾರದಲ್ಲಿ ಇಲ್ಲವಾಗಿದೆ ಎಂದ ಅವರು, ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಎ.ಸಿ. ಸಾಬು, ರಮೇಶ್, ಗಣೇಶ್, ಮಹದೇವ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.