ಹಾಕತ್ತೂರು ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಗೆ ಸೇರ್ಪಡೆ

09/10/2020

ಮಡಿಕೇರಿ ಅ.9 : ಹಾಕತ್ತೂರು ಗ್ರಾ.ಪಂ ವ್ಯಾಪ್ತಿಯ 25ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಲ್ಲಾಚಂಡ ಗೌತಮ್ ನೇತೃತ್ವದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಾಕತ್ತೂರಿನ ಲೋಕೇಶ್ ಹಾಗೂ ನಾಗೇಶ್ ಮುಂದಾಳತ್ವದಲ್ಲಿ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ನಂತರ ಮಾತನಾಡಿದ ಗಣೇಶ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮಾಜಮುಖಿ ಕೆಲಸಗಳಿಂದ ಜೆಡಿಎಸ್ ಪಕ್ಷದ ಬಗ್ಗೆ ಜನರಲ್ಲಿ ಉತ್ತಮ ಅಭಿಪ್ರಾಯವಿದೆ ಎಂದರು.
ಜೆಡಿಎಸ್ ಪಕ್ಷ ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತವಾದ ಪಕ್ಷವಲ್ಲ. ಬಡವರ ಕಲ್ಯಾಣಕ್ಕಾಗಿ ಇರುವ ಪಕ್ಷವಾಗಿದ್ದು, ಎಲ್ಲರ ಸಮಸ್ಯೆಗಳಿಗೂ ಸ್ಪಂದನೆ ದೊರೆಯುತ್ತಿದೆ ಎಂದು ತಿಳಿಸಿದರು.
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಉತ್ತಮ ನಾಯಕತ್ವವನ್ನು ನಿರ್ವಹಿಸುವವರಿಗೆ ಜೆಡಿಎಸ್ ಪಕ್ಷ ಉತ್ತಮ ವೇದಿಕೆಯಾಗಿದೆ ಎಂದರಲ್ಲದೆ ಪಕ್ಷವನ್ನು ಸಂಘಟಿಸುವತ್ತ ಗಮನ ಹರಿಸುವಂತೆ ಕರೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮನೋಜ್ ಬೋಪಯ್ಯ ಮಾತನಾಡಿ, ಜೆಡಿಎಸ್ ಪಕ್ಷ ಒಂದು ಕುಟುಂಬವಿದ್ದಂತೆ. ಪಕ್ಷದ ಎಲ್ಲಾ ಕಾರ್ಯಕರ್ತರು ಹೋರಾಟದ ಮನೋಭಾವನೆಯನ್ನು ಹೊಂದಿದ್ದಾರೆ ಎಂದರು.
ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಕಾರ್ಯದಲ್ಲಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದ್ದು, ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ, ಯಾರಿಗೂ ನೆಮ್ಮದಿ ಇಲ್ಲದಾಗಿದೆ ಎಂದು ಟೀಕಿಸಿದರು.
ಜೆಡಿಎಸ್ ಪಕ್ಷ ಮುಂಚೂಣಿಯಲ್ಲಿದ್ದು, ಪಕ್ಷ ಸಂಘಟನೆಯತ್ತ ಕಾರ್ಯಕರ್ತರು ಗಮನಹರಿಸಬೇಕು. ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಯುವ ಪ್ರಧಾನ ಕಾರ್ಯದರ್ಶಿ ಜಾಶಿರ್, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಮಹಿಳಾ ಘಟಕದ ನಗರಾಧ್ಯಕ್ಷೆ ಸುನಂದ, ಜಿಲ್ಲಾ ಯುವ ವಕ್ತಾರ ಜಿನಸ್, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಅಭಿತ್ ಅಪ್ಪಯ್ಯ ಸಭೆಯಲ್ಲಿ ಉಪಸ್ಥಿತರಿದ್ದರು.