ಮಹಿಳಾ ಘಟಕದ ಸಭೆ : ಬಡವರಿಗೆ ವಸತಿ ನೀಡಿ, ಇಲ್ಲ ಪ್ರತಿಭಟನೆ ಎದುರಿಸಿ : ಕೊಡಗು ಜೆಡಿಎಸ್ ಎಚ್ಚರಿಕೆ

19/10/2020

ಮಡಿಕೇರಿ ಅ.19 : ವಸತಿ ರಹಿತ ಕಡುಬಡವರು, ಕಾರ್ಮಿಕ ವರ್ಗ ಹಾಗೂ ಸಂತ್ರಸ್ತರಿಗೆ ನೆಲೆ ಕಲ್ಪಿಸಲು ವಸತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದಲ್ಲಿ ಜಿಲ್ಲಾ ಜಾತ್ಯಾತೀತ ಜನತಾದಳದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪ ಸಂದರ್ಭ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 840 ಮನೆಗಳನ್ನು ನಿರ್ಮಿಸಿಕೊಡುವ ಮೂಲಕ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿದ್ದಾರೆ. ಆದರೆ 2019 ರಲ್ಲಿ ಸಂಭವಿಸಿದ ಅತಿವೃಷ್ಟಿ ಸಂದರ್ಭ ಅನೇಕರು ನಿರಾಶ್ರಿತರಾದರೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇಲ್ಲಿಯವರೆಗೆ ಮನೆಗಳನ್ನು ನಿರ್ಮಿಸಿಕೊಡಲಿಲ್ಲ ಎಂದು ಟೀಕಿಸಿದರು.
ಬಡವರಿಗೆ, ಕೂಲಿ ಕಾರ್ಮಿಕರಿಗೆ ತಲೆಗೊಂದು ಸೂರು ನೀಡುವಂತೆ ಹಲವು ಬಾರಿ ಒತ್ತಾಯಿಸಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡಿಲ್ಲ. ಬಡವರ ಪರವಾಗಿ ಜೆಡಿಎಸ್ ಸಧ್ಯದಲ್ಲಿಯೇ ಹೋರಾಟವನ್ನು ರೂಪಿಸಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜನಪರ ಕಾಳಜಿಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪಕ್ಷ ಸಂಘಟನೆಗೆ ಕಾರ್ಯಕರ್ತರು ಒತ್ತು ನೀಡಬೇಕೆಂದು ತಿಳಿಸಿದರು. ಮಹಿಳಾ ಘಟಕದ ಪದಾಧಿಕಾರಿಗಳು ಪಕ್ಷಕ್ಕೆ ಹೆಚ್ಚಿನ ಬಲ ತುಂಬಬೇಕು. ಬೂತ್ ಮಟ್ಟದಿಂದಲೇ ಪಕ್ಷವನ್ನು ಕಟ್ಟಿ ಬೆಳೆಸಬೇಕು ಎಂದು ಗಣೇಶ್ ಹೇಳಿದರು.
ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾಶೇಷಮ್ಮ ಮಾತನಾಡಿ, ವಸತಿ ಹಾಗೂ ನಿವೇಶನ ರಹಿತರಿಗೆ ವಿವಿಧ ಯೋಜನೆಗಳಡಿಯಲ್ಲಿ ಪ್ರತಿವರ್ಷ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗುತ್ತಿತ್ತು. ಆದರೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇದುವರೆಗೆ ವಸತಿ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿಂದೆ ನಿವೇಶನ ರಹಿತರಿಗಾಗಿ ಜಾಗವನ್ನು ಗುರುತಿಸಿ, ಫಲಾನುಭವಿಗಳ ಪಟ್ಟಿಯನ್ನು ತಯಾರಿಸಲಾಗಿತ್ತು. ಆದರೆ ಪ್ರಾಕೃತಿ ವಿಕೋಪದ ನಂತರ ಜಿಲ್ಲಾಡಳಿತವಾಗಲಿ, ನಗರಸಭೆಯಾಗಲಿ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್‍ಖಾನ್, ಮಹಿಳಾ ಜಿಲ್ಲಾಧ್ಯಕ್ಷೆ ಎಂ.ಎಂ.ರುಬೀನಾ, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ನಗರ ಮಹಿಳಾಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಲಲಿತ, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನಿಲ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್, ಸಾಮಾಜಿಕ ಜಾಲಾತಾಣ ಸಂಚಾಲಕ ಸೈಫ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬೊಳ್ಳಿಯಂಡ ಗಣೇಶ್, ನಗರ ಎಸ್.ಸಿ. ಘಟಕ ಅಧ್ಯಕ್ಷ ರವಿಕುಮಾರ್ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಗೆ ಸೇರ್ಪಡೆಗೊಂಡರು.