ಎಚ್ಚರಿಕೆ ವಹಿಸಿ ಕೋವಿಡ್‍ನಿಂದ ದೂರವಿರಿ

21/10/2020

ಮಡಿಕೇರಿ ಅ.21 : ಕೋವಿಡ್-19 ವ್ಯಾಪಕ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ಅನುಸರಿಸುತ್ತಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಲವಾರು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸಾರ್ವಜನಿಕರು ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕೋವಿಡ್ ಸೋಂಕು ಬಾರದಂತೆ ತಡೆಯಬಹುದಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.
ಕೋವಿಡ್-19 ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಪ್ರತಿಯೊಬ್ಬರು ಮಾಸ್ಕ್ ದಾರಣೆ ಮಾಡಬೇಕು. ಇದರೊಂದಿಗೆ 6 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಈ ಮೂಲಕ ಸೋಂಕು ಹರಡಂತೆ ತಡೆಯಲು ಸಾಧ್ಯವಾಗುತ್ತದೆ.

ಸೋಂಕಿತರು ಸೀನಿದಾಗ, ಕೆಮ್ಮಿದಾಗ, ಸೋಂಕಿತರೊಂದಿಗೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಚಗೊಳಿಸದ/ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿ ಮುಟ್ಟುವುದರಿಂದ ಕೋವಿಡ್-19 ಹರಡುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ಎಚ್ಚರ ವಹಿಸಬೇಕಿದೆ.
ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಬೇಧಿ ನೋವೆಲ್ ಕೊರೋನ ವೈರಸ್‍ನ ಲಕ್ಷಣಗಳಾಗಿದೆ.
ಸೋಂಕು ಪೀಡಿತರ ಸಂಪರ್ಕದಿಂದ ದೂರವಿರುವುದು, ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಮಾಸ್ಕ್ ಬಳಸುವುದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ವಿಶೇಷವಾಗಿ ಆಗಾಗ್ಗೆ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕೈವಸ್ತ್ರ ಉಪಯೋಗಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು, ಉಸಿರಾಟ ತೊಂದರೆಯಾದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಸೋಂಕನ್ನು ತಡೆಗಟ್ಟಬಹುದಾಗಿದೆ.
ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣವೇ ಆಪ್ತಮಿತ್ರ ಸಹಾಯವಾಣಿ ಸಂಖ್ಯೆ 14410 ಮತ್ತು ರಾಷ್ಟ್ರೀಯ ಹೆಲ್ಪ್ ಲೈನ್ ಸಂಖ್ಯೆ 1075 ನ್ನು ಸಂಪರ್ಕಿಸಬಹುದಾಗಿದೆ.