ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ

23/10/2020

ಬೆಂಗಳೂರು ಅ.23 : ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಹಾಗೂ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಚಿಟ್ ಫಂಡ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು-2020ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟದಲ್ಲಿ ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಕರ್ನಾಟಕ ಭೂ ಸುಧಾರಣೆಗಳ(ಎರಡನೇ ತಿದ್ದುಪಡಿ) ವಿಧೇಯಕ-2020ಕ್ಕೆ ಅನುಮೋದನೆ ನೀಡಲಾಗಿದೆ. ಕಳೆದ ಬಾರಿಯ ಸಂಪುಟದಲ್ಲಿ ಒಂದನೇ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿ, ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಲಾಗಿತ್ತು.
ಉಡುಪಿ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಈ ಆಸ್ಪತ್ರೆ ಕಟ್ಟಡ, ಸಿಬ್ಬಂದಿ ವಸತಿ ಗೃಹಗಳ ಹಾಗೂ ಇತರ ಮೂಲಭೂತ ಸೌಲಭ್ಯ ಕಾಮಗಾರಿಗಳನ್ನು 115 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.