ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಎಂಎಲ್‍ಸಿ ಸುನಿಲ್ ಸುಬ್ರಮಣಿ ಚಾಲನೆ

23/10/2020

ಮಡಿಕೇರಿ ಅ.23 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯರು 96 ಲಕ್ಷ ರೂ. ವೆಚ್ಚದಲ್ಲಿ 6 ಕೊಠಡಿ ಒಳಗೊಂಡ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಮಾಡಲಾಗಿದೆ. ನೂತನ ಕಟ್ಟಡ ನಿರ್ಮಾಣವಾಗುತ್ತಿರುವುದು ಅಭಿವೃದ್ಧಿಯ ಸಂಕೇತವಾಗಿದೆ. ಉತ್ತಮ ರೀತಿಯಲ್ಲಿ ಕಟ್ಟಡ ನಿರ್ಮಾಣವಾಗಿ, ಶೀಘ್ರದಲ್ಲಿಯೇ ಬಳಕೆಗೆ ಲಭ್ಯವಾಗಲಿ ಎಂದು ಅವರು ಶುಭ ಹಾರೈಸಿದರು.
ಮಡಿಕೇರಿ ದಸರಾ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯರು ಕೋವಿಡ್-19 ಹಿನ್ನೆಲೆ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಿಸಲಾಗುತ್ತಿದೆ. ಕಟ್ಟಡ ಅಲಂಕಾರ ಮತ್ತಿತರ ವಿಚಾರಗಳಿಗಿಂತ ಜನರ ಜೀವ ರಕ್ಷಣೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕಿದೆ. ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಎಸ್‍ಡಿಎಂಸಿ ಉಪಾಧ್ಯಕ್ಷರಾದ ಧನಂಜಯ, ಸದಸ್ಯರಾದ ಉಮಾದೇವಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಹಾಲಿಂಗಯ್ಯ, ಪ್ರಾಂಶುಪಾಲರಾದ ವಿಜಯ, ಉಪನ್ಯಾಸಕರಾದ ಚಿದಾನಂದ್, ಮಹಾಂತೇಶ್, ಸಿದ್ದರಾಜು ಬೆಳ್ಳಯ್ಯ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ದೇವರಾಜ್ ಇತರರು ಇದ್ದರು.